ಕನ್ನಡದ ಮಹಾಕವಿ ಕುವೆಂಪು (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ) ವೆಂಕಟಪ್ಪಗೌಡ- ಸೀತಮ್ಮ ದಂಪತಿಗಳಿಗೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ 29-12-1908 ರಲ್ಲಿ ಜನಿಸಿದರು. 1916 ರಲ್ಲಿ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ 1929 ರಲ್ಲಿ ಎಂ.ಎ. ಪದವಿ ಗಳಿಸಿದರು 1929 ರಲ್ಲಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ಪ್ರಿನ್ಸಿಪಾಲರಾಗಿ 1956 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿ 1960 ರಲ್ಲಿ ನಿವೃತ್ತರಾದರು.
ಕುವೆಂಪು ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದರು. ಅವರು ಕನ್ನಡಕ್ಕೆ ನೀಡಿದ ಕೊಡುಗೆಗಳಿಗಾಗಿ ಕನ್ನಡದ ಸಾಹಿತ್ಯಗಳನ್ನು ರಚಿಸಿದ್ದಕ್ಕಾಗಿ ಅವರಿಗೆ ಅನೇಕ ಮನ್ನಣೆ ಪ್ರಶಸ್ತಿಗಳು ದೊರೆತವು. ಮೈಸೂರಿನಲ್ಲಿ ನಡೆದ 38 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತಾಧ್ಯಕ್ಷರಾದರು. ಧಾರವಾಡದಲ್ಲಿ 1957 ರಲ್ಲಿ ನಡೆದ 39 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ರಾಷ್ಟ್ರಪತಿಗಳಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯಸರ್ಕಾರದಿಂದ ರಾಷ್ಟ್ರಕವಿ ಪ್ರಶಸ್ತಿಯನ್ನೂ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನೂ ಪಡೆದರು.
ಬೆಂಗಳೂರು ವಿಶ್ವವಿದ್ಯಾನಿಲದಿಂದ 1969 ರಲ್ಲಿ ಗೌರವ ಡಿ.ಲಿಟ್. ಲಭಿಸಿತು. ಪಂಪ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ರಾಷ್ಟ್ರಕವಿ ಪ್ರಶಸ್ತಿಗಳು ಕುವೆಂಪು ಅವರ ದೈತ್ಯಸಾಹಿತ್ಯ ಪ್ರತಿಭೆಗೆ ಸಿಕ್ಕ ಪುರಸ್ಕಾರಗಳಾಗಿವೆ.
1968 ರಲ್ಲಿ ಶ್ರೀರಾಮಾಯಣ ದರ್ಶನಂ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿತು. ಇದು ಕನ್ನಡದಲ್ಲಿ ಮೊದಲ ಜ್ಞಾನಪೀಠ ಪ್ರಶಸ್ತಿ ಆಗಿದೆ. 1995 ರಲ್ಲಿ ನಾಡೋಜ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರ ನೀಡಲಾಯಿತು. 1985 ರಲ್ಲಿ ಮೈಸೂರಿನಲ್ಲಿ ನಡೆದ ಮೊದಲನೇ ವಿಶ್ವಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
ಅಪಾರ ಅನುಪಮ ಸಾಹಿತ್ಯ ರಚನೆ ಮಾಡಿದ್ದ ಕುವೆಂಪು ಅವರು, ಕವನ ಸಂಕಲನ, ಖಂಡಕಾವ್ಯ, ಮಹಾಕಾವ್ಯಗಳನ್ನು ರಚಿಸಿದರು. ಅನುವಾದಿತ ಮತ್ತು ಸ್ವತಂತ್ರ ನಾಟಕಗಳನ್ನು ಬರೆದರು. ಕಾದಂಬರಿ, ಕಥೆ, ಗದ್ಯಚಿತ್ರ. ಆತ್ಮಚರಿತ್ರೆ, ಭಾಷಾಂತರ ಗ್ರಂಥಗಳನ್ನು ರಚಿಸಿದರು. ಮಾಸ್ತಿ ಜತೆ ಕರ್ಣಾಟಕ ಭಾರತ ಕಥಾಮಂಜರಿಯನ್ನು ಸಂಪಾದಿಸಿದ್ದಾರೆ.
- ಕೊಡುಗೆ
ಕುವೆಂಪು ಅವರು ಯುಗಪ್ರವರ್ತಕ ಕವಿ.
ಕುವೆಂಪು ಅವರು ‘ಶ್ರೀ ರಾಮಾಯಣ ದರ್ಶನಂ’ ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ ರಚನೆಗೆ ನಾಂದಿ ಹಾಡಿದರು.
ಕುವೆಂಪು ಅವರು ತಮ್ಮ ಮೇರು ಕೃತಿ ‘ಶ್ರೀ ರಾಮಾಯಣ ದರ್ಶನಂ’ನಲ್ಲಿ ಹೊಸ ಕಾಲಕ್ಕೆ ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.
ಕುವೆಂಪು ಅವರು ವಿಶ್ವಮಾನವ ಸಂದೇಶ ನೀಡಿದ್ದಾರೆ.
ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.
ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.
ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.
1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
- ಅವರ ಕೆಲವು ಪ್ರಸಿದ್ಧ ಕೃತಿಗಳು ಇವು:
ಶ್ರೀರಾಮಯಣ ದರ್ಶನಂ, ಕಬ್ಬಿಗನ ಕೈಬುಟ್ಟಿ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ, ವಿಚಾರ ಕ್ರಾಂತಿಗೆ ಆಹ್ವಾನ, ಬೆರಳ್ಗೆ ಕೊರಳ್, ಶೂದ್ರತಪಸ್ವಿ, ಸ್ವಾಮಿ ವಿವೇಕಾನಂದ, ಚಿತ್ರಾಂಗದಾ, ಪಾಂಚಜನ್ಯ, ಬೊಮ್ಮನಹಳ್ಳ್ಳಿ ಕಿಂದರಿಜೋಗಿ, ಕೊಳಲು ಇತ್ಯಾದಿ.
ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿದ್ದ ಕುವೆಂಪು ಅವರು 11/11/1998 ರಲ್ಲಿ ಮೈಸೂರಿನಲ್ಲಿ ನಿಧನರಾದರು. - ಜೀವನ
ಬಾಲ್ಯ
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29/1908 ರಲ್ಲಿ ಜನಿಸಿದರು ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
- ಶಿಕ್ಷಣ
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು. - ವೃತ್ತಿಜೀವನ
ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.